ದಾವಣಗೆರೆ: ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯು ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದು, ಸಾಮಾನ್ಯ ಕಾರ್ಯಕರ್ತ ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರಿಗೆ ಟಿಕೆಟ್ ನೀಡುವ ಮೂಲಕ ಅಚ್ಚರಿ ಮೂಡಿಸಿದೆ. ಬಿಜೆಪಿ ಎಸ್‌ಟಿ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಇವರಿಗೆ ಈಗ ದೊಡ್ಡ ಜವಾಬ್ದಾರಿ ಹೆಗಲಿಗೇರಿದೆ.
ಸಾಮಾನ್ಯ ಕಾರ್ಯಕರ್ತನಿಗೆ ಒಲಿದ ಅದೃಷ್ಟ
ಕ್ಷೇತ್ರದಲ್ಲಿ ಪ್ರಭಾವಿ ನಾಯಕರ ಹೆಸರುಗಳು ಕೇಳಿಬರುತ್ತಿದ್ದ ನಡುವೆಯೇ, ಪಕ್ಷವು ತಳಮಟ್ಟದ ಕಾರ್ಯಕರ್ತನನ್ನು ಗುರುತಿಸಿರುವುದು ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ. ಟಿಕೆಟ್ ಲಭಿಸಿದ ಬಳಿಕ ಮಾತನಾಡಿದ ಶ್ರೀನಿವಾಸ್ ಅವರು, “ನನ್ನಂತಹ ಸಾಮಾನ್ಯ ಕಾರ್ಯಕರ್ತನ ಮೇಲೆ ನಂಬಿಕೆ ಇಟ್ಟು ಟಿಕೆಟ್ ನೀಡಿದ ರಾಜ್ಯ ಮತ್ತು ರಾಷ್ಟ್ರ ನಾಯಕರಿಗೆ ಧನ್ಯವಾದಗಳು. ಇದು ಕೇವಲ ನನಗಲ್ಲ, ಇಡೀ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಸಂದ ಜಯ” ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಭದ್ರಕೋಟೆಗೆ ಲಗ್ಗೆ ಇಡುವ ಗುರಿ
ದಾವಣಗೆರೆ ದಕ್ಷಿಣ ಕ್ಷೇತ್ರವು ದಶಕಗಳಿಂದ ಶಾಮನೂರು ಶಿವಶಂಕರಪ್ಪ ಕುಟುಂಬದ ಭದ್ರಕೋಟೆಯಾಗಿ ಗುರುತಿಸಿಕೊಂಡಿದೆ. ಇದನ್ನು ಭೇದಿಸಲು ಬಿಜೆಪಿ ಈಗಿನಿಂದಲೇ ಸಿದ್ಧತೆ ನಡೆಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅಭ್ಯರ್ಥಿ ಶ್ರೀನಿವಾಸ್, “ಕಳೆದ 20 ವರ್ಷಗಳಿಂದ ಕಾಂಗ್ರೆಸ್ ಇಲ್ಲಿ ಅಧಿಕಾರದಲ್ಲಿದೆ. ಆದರೆ ಇಂದಿಗೂ ಕ್ಷೇತ್ರದ ಅನೇಕ ಬಡಾವಣೆಗಳಲ್ಲಿ ರಸ್ತೆ, ಚರಂಡಿ, ಶಿಕ್ಷಣ ಮತ್ತು ಆರೋಗ್ಯ ವ್ಯವಸ್ಥೆ ಹದಗೆಟ್ಟಿದೆ. ಜನ ಬದಲಾವಣೆ ಬಯಸುತ್ತಿದ್ದಾರೆ. 224 ಕ್ಷೇತ್ರಗಳಲ್ಲಿಯೇ ಇದು ಮಾದರಿ ಕ್ಷೇತ್ರವಾಗಬೇಕು ಎಂಬ ಕನಸು ನನ್ನದು” ಎಂದು ತಿಳಿಸಿದರು.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಒಗ್ಗಟ್ಟಿನ ಮಂತ್ರ ಜಪಿಸಿದ ಅಭ್ಯರ್ಥಿ
ಪಕ್ಷದೊಳಗೆ ಭಿನ್ನಮತವಿದೆ ಎಂಬ ವದಂತಿಗಳನ್ನು ತಳ್ಳಿಹಾಕಿದ ಅವರು, ಜಿ.ಎಂ. ಸಿದ್ದೇಶ್ವರ್, ರವೀಂದ್ರನಾಥ್, ರೇಣುಕಾಚಾರ್ಯ ಸೇರಿದಂತೆ ಜಿಲ್ಲೆಯ ಎಲ್ಲಾ ಹಿರಿಯ ನಾಯಕರ ನೇತೃತ್ವದಲ್ಲಿ ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಯಾರೇ ಆಗಲಿ, ಅವರ ವಿರುದ್ಧ ಹೋರಾಡಿ ಕಮಲ ಅರಳಿಸುವುದೇ ನಮ್ಮ ಏಕೈಕ ಗುರಿ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ವಿರುದ್ಧ ಕಿಡಿ
ಇದೇ ವೇಳೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಅವರು, ಸರ್ಕಾರ ಕೇವಲ ಕಣ್ಣೊರೆಸುವ ತಂತ್ರ ಮಾಡುತ್ತಿದೆ. ಅಭಿವೃದ್ಧಿ ಕೆಲಸಗಳಿಗೆ ಹಣ ನೀಡದೆ ಜನರನ್ನು ವಂಚಿಸುತ್ತಿದೆ. ಕ್ಷೇತ್ರದ ಜನತೆ ಈ ಬಾರಿ ಅಭಿವೃದ್ಧಿಗೆ ಮತ ನೀಡಲಿದ್ದಾರೆ ಎಂದು ಗುಡುಗಿದ್ದಾರೆ.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
