ಚಿತ್ರದುರ್ಗ: ಗೃಹಲಕ್ಷ್ಮೀ ಯೋಜನೆಯಡಿ ಮೃತಪಟ್ಟ ಫಲಾನುಭವಿಗಳ ಹೆಸರಿನಲ್ಲಿ ಹಣ ಪಾವತಿಯಾಗುತ್ತಿರುವುದನ್ನು ತಡೆಗಟ್ಟಲು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಶುಕ್ರವಾರ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗೃಹಲಕ್ಷ್ಮೀ ಯೋಜನೆಯ ಮರಣ ಹೊಂದಿದ ಫಲಾನುಭವಿಗಳ ವಿವರಗಳನ್ನು ಪತ್ತೆಹಚ್ಚಲು ಅಂಗನವಾಡಿ ಕಾರ್ಯಕರ್ತೆಯರ ನೆರವು ಪಡೆಯಬೇಕು. ಮೃತಪಟ್ಟವರ ಪ್ರಮಾಣ ಪತ್ರಗಳನ್ನು ಸಂಗ್ರಹಿಸಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಮೂಲಕ ರಾಜ್ಯ ಮಟ್ಟಕ್ಕೆ ವರದಿ ಸಲ್ಲಿಸಿ, ಅಂತಹ ಖಾತೆಗಳಿಗೆ ಹಣ ಪಾವತಿಯಾಗುವುದನ್ನು ತಕ್ಷಣ ತಡೆಹಿಡಿಯಬೇಕು ಎಂದು ನಿರ್ದೇಶನ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯ್ ಕುಮಾರ್ ಮಾತನಾಡಿ, ಗೃಹಲಕ್ಷ್ಮೀ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 3,98,667 ಮಹಿಳೆಯರು ನೋಂದಾಯಿಸಿಕೊಂಡಿದ್ದು, ಈ ಪೈಕಿ 3,86,770 ಮಂದಿಗೆ ಈಗಾಗಲೇ ಹಣ ತಲುಪಿದೆ. ಜಿಲ್ಲೆಯು ಈ ಯೋಜನೆಯ ಅನುಷ್ಠಾನದಲ್ಲಿ ಶೇ. 97 ರಷ್ಟು ಪ್ರಗತಿ ಸಾಧಿಸಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಮೃತಪಟ್ಟವರ ಹೆಸರಿನಲ್ಲಿ ಹಣ ವರ್ಗಾವಣೆಯಾಗುವುದನ್ನು ತಡೆಯಲು ಇ-ಗವರ್ನೆನ್ಸ್ ಅಂಕಿ-ಅಂಶಗಳ ಆಧಾರದ ಮೇಲೆ ಕ್ರಮವಹಿಸಲಾಗಿದ್ದು, ಯೋಜನೆ ಆರಂಭವಾದಾಗಿನಿಂದ ಇಲ್ಲಿಯವರೆಗೂ ಮೃತಪಟ್ಟ 8,843 ಮಹಿಳೆಯರ ಹೆಸರನ್ನು ಪಟ್ಟಿಯಿಂದ ಕೈಬಿಡಲು ಪ್ರಕ್ರಿಯೆ ಆರಂಭವಾಗಿದೆ. ಮೃತ ಫಲಾನುಭವಿಗಳ ಖಚಿತ ಮಾಹಿತಿ ಪಡೆಯಲು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮ ಲೆಕ್ಕಿಗರು ಮನೆ ಮನೆಗೆ ತೆರಳಿ ಮರಣ ಪ್ರಮಾಣಪತ್ರಗಳನ್ನು ಸಂಗ್ರಹಿಸುತ್ತಿದ್ದಾರೆ. ಈ ಪರಿಶೀಲನೆಯು ಮುಂದಿನ 15 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ಬಹಿರಂಗವಾಗಿ ನಡೆಯುತ್ತಿದೆ ಅಕ್ಕಿ ದಂಧೆ
ಜಿಲ್ಲೆಯ ಹಳ್ಳಿಗಳಲ್ಲಿ ಅನ್ನಭಾಗ್ಯ ಯೋಜನೆಯಡಿ ವಿತರಿಸಲಾಗುವ ಅಕ್ಕಿಯನ್ನು ಸಾರ್ವಜನಿಕರಿಂದ ಖರೀದಿಸಿ, ಅದನ್ನು ಮರಳಿ ಮಾರಾಟ ಮಾಡುವ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.
ದಂಧೆಕೋರರು ಆಟೋಗಳಲ್ಲಿ ಮೈಕ್ ಸೆಟ್ ಹಾಕಿಕೊಂಡು, ಕೆ.ಜಿ. ಅಕ್ಕಿಗೆ 10 ರೂಪಾಯಿಯಂತೆ ಬಹಿರಂಗವಾಗಿ ವ್ಯಾಪಾರ ಮಾಡುತ್ತಿದ್ದಾರೆ. ಈ ಬಗ್ಗೆ ಆಹಾರ ಇಲಾಖೆಗೆ ಮಾಹಿತಿ ಇದ್ದರೂ, ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಆರ್ಥಿಕವಾಗಿ ಸದೃಢರಾಗಿರುವವರು ಕೂಡ ಬಿಪಿಎಲ್ ಕಾರ್ಡ್ಗಳನ್ನು ಹೊಂದಿದ್ದಾರೆ. ಮನೆಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ಗಳಿದ್ದರೂ, ಸ್ವಂತ ಕಾರು ಮತ್ತು ಐಷಾರಾಮಿ ಬಂಗಲೆಗಳಿದ್ದರೂ ಅಂತಹ ಕುಟುಂಬಗಳು ಪಡಿತರ ಕೇಂದ್ರಗಳಿಗೆ ಬಂದು ಅಕ್ಕಿ ಪಡೆಯುತ್ತಿರುವುದು ಬೆಳಕಿಗೆ ಬಂದಿದೆ. ಇದು ನಿಜವಾದ ಅರ್ಹ ಬಡವರಿಗೆ ಅನ್ಯಾಯ ಮಾಡುತ್ತಿದೆ. ಈ ಕುರಿತು ಅಧಿಕಾರಿಗಳು ಸೂಕ್ತ ಕ್ರಮವಹಿಸಬೇಕು ಎಂದು ಸೂಚಿಸಿದರು. ಅನ್ನಭಾಗ್ಯ ಯೋಜನೆಯ ಪಾರದರ್ಶಕತೆಗಾಗಿ ಪ್ರತಿಯೊಂದು ನ್ಯಾಯಬೆಲೆ ಅಂಗಡಿಯ ಮುಂದೆ ಅನ್ನಭಾಗ್ಯ ಯೋಜನೆ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ನೀಡುವ ಬೋರ್ಡ್ಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಸದಸ್ಯರು ತಾಕೀತು ಮಾಡಿದರು.
‘ಗೃಹಲಕ್ಷ್ಮಿ” ಹಾಗೂ “ಶಕ್ತಿ” ಯೋಜನೆ ಸಂಭ್ರಮಾಚರಣೆಗೆ ಸೂಚನೆ
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಜಿಲ್ಲೆಯಾದ್ಯಂತ ಗ್ಯಾರಂಟಿ ಯೋಜನೆಗಳ ಫಲಾನುಭವಿ ಮಹಿಳೆಯರನ್ನು ಒಗ್ಗೂಡಿಸಿ ಅರ್ಥಪೂರ್ಣವಾಗಿ ಕಾರ್ಯಕ್ರಮ ಆಯೋಜಿಸುವಂತೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್. ಶಿವಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗ್ಯಾರಂಟಿ ಯೋಜನೆಗಳಲ್ಲಿ, ವಿಶೇಷವಾಗಿ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲಾಗಿದ್ದು, ಈ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳನ್ನು ಆಹ್ವಾನಿಸಿ ಮಹಿಳಾ ದಿನಾಚರಣೆ ಆಚರಿಸಬೇಕು. ಈ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಪ್ರತಿಯೊಂದು ಕೇಂದ್ರದಲ್ಲೂ ಯೋಜನೆಯ ತಲುಪುವಿಕೆ ಮತ್ತು ಮಹಿಳೆಯರ ಸಬಲೀಕರಣದ ಕುರಿತು ಚರ್ಚೆಗಳಾಗಬೇಕು ಎಂದರು.
ಶಕ್ತಿ ಯೋಜನೆಯು ರಾಜ್ಯದಲ್ಲಿ ಅಭೂತಪೂರ್ವ ಯಶಸ್ಸು ಕಂಡಿದ್ದು, ಈಗಾಗಲೇ 550 ಕೋಟಿಗೂ ಅಧಿಕ ಮಹಿಳೆಯರು ಇದರ ಲಾಭ ಪಡೆದು ದಾಖಲೆ ನಿರ್ಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕು ಬಸ್ ನಿಲ್ದಾಣಗಳಲ್ಲಿ ಮಹಿಳಾ ಪ್ರಯಾಣಿಕರು ಹಾಗೂ ಗ್ಯಾರಂಟಿ ಸಮಿತಿಯ ಸದಸ್ಯರೊಂದಿಗೆ ಸಂಭ್ರಮಾಚರಣೆಗೆ ಕ್ರಮ ವಹಿಸಬೇಕು ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಯುವನಿಧಿ ಯೋಜನೆಯಡಿ ಸೌಲಭ್ಯ ಪಡೆಯುತ್ತಿರುವ ನಿರುದ್ಯೋಗಿ ಪದವೀಧರರಿಗೆ ಕೇವಲ ಭತ್ಯೆ ನೀಡುವುದಷ್ಟೇ ಅಲ್ಲದೆ, ಅವರಿಗೆ ಸೂಕ್ತ ಕೌಶಲ್ಯಾಭಿವೃದ್ಧಿ ತರಬೇತಿ ನೀಡಬೇಕು. ಆ ಮೂಲಕ ಅವರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಉದ್ಯೋಗಾಧಿಕಾರಿಗಳಿಗೆ ತಿಳಿಸಿದ ಅವರು. ಸರ್ಕಾರದ ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ತಲುಪುವಂತೆ ಮಾಡಲು ಗ್ರಾಮ ಮಟ್ಟದಲ್ಲಿ ವ್ಯಾಪಕ ಪ್ರಚಾರ ಮತ್ತು ಜಾಗೃತಿ ಮೂಡಿಸುವುದು ಅತ್ಯಗತ್ಯ ಎಂದರು.
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಿ.ಎನ್.ಮೈಲಾರಪ್ಪ, ಖಾದಿ ರಮೇಶ್, ನಿರಂಜನ್, ಸದಸ್ಯರಾದ ಹೆಚ್.ಟಿ. ಹನುಮಂತಪ್ಪ, ಅಬ್ದುಲ್ ಶಾ ವಲಿ, ಪ್ರಕಾಶ್, ಮಧುಪಾಲೇಗೌಡ, ಕೃಷ್ಣಮೂರ್ತಿ, ಇಂದಿರಾ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯತ್ರಿ, ಯೋಜನಾ ನಿರ್ದೇಶಕಿ ಜಯಲಕ್ಷ್ಮೀ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
———————————————————————————————————————-
ಹೆಚ್ಚಿನ ಮಾಹಿತಿಗಾಗಿ ಲಿಂಕ್‌ಗಳು:
ಇನ್ನಷ್ಟು ಆರೋಗ್ಯ ಮತ್ತು ದೈನಂದಿನ ಸುದ್ದಿಗಳಿಗಾಗಿ:ಮಧ್ಯ ಕರ್ನಾಟಕ ಲೈವ್ ಗೆ ಭೇಟಿ ನೀಡಿ.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ. ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್
ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More